ಉಜಿರೆ: ವಿದ್ಯಾರ್ಥಿಗಳು ಜೀವನದಲ್ಲಿ ಭಯ ಮತ್ತು ಹಿಂಜರಿಕೆಯನ್ನು ಬಿಟ್ಟು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಸೃಜನಶೀಲತೆ ಮತ್ತು ಪ್ರಾಯೋಗಿಕ ಅನುಭವಗಳು ವಿದ್ಯಾರ್ಥಿಗಳ ವೃತ್ತಿ ಬದುಕಿಗೆ ಭದ್ರ ಬುನಾದಿ ಹಾಕಿಕೊಡುತ್ತವೆ ಎಂದು ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್‌ನ ಕರ್ನಾಟಕ ಮತ್ತು ಕೇರಳ ರಾಜ್ಯ ಕಾರ್ಯಾಚರಣೆಯ ಕಸ್ಟಮರ್ ಎಕ್ಸ್ಪೀರಿಯೆನ್ಸ್ ಮುಖ್ಯಸ್ಥೆ ದಿಯಾ ಅಜಯ್ ತಿಳಿಸಿದರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾಣಿಜ್ಯ ಮತ್ತು ಉದ್ಯಮ ಆಡಳಿತ ವಿಭಾಗ ಹಾಗೂ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ರಾಜ್ಯಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ವೆಂಚುರ-2026’ ಅನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸೋಲು ಮತ್ತು ಗೆಲುವು ಎಂಬುದು ಯಾವುದೇ ಸ್ಪರ್ಧೆಯ ಅವಿಭಾಜ್ಯ ಅಂಗ. ಸೋಲಿನ ಭೀತಿಯಿಂದ ಸ್ಪರ್ಧೆಗಳಿಂದ ದೂರ ಉಳಿಯಬಾರದು. ಇಂತಹ ಫೆಸ್ಟ್‌ಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಿಗೆ ವೃತ್ತಿಪರ ಜಗತ್ತಿನ ಅನುಭವ ಸಿಗುತ್ತದೆ. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಭವಿಷ್ಯದ ದೃಷ್ಟಿಯಿಂದ ಅತ್ಯಂತ ಅವಶ್ಯಕ ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿಶ್ವನಾಥ ಪಿ. ಅವರು ಮಾತನಾಡಿ, "ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಂಕಗಳಿಗೆ ಸೀಮಿತವಾಗದೆ, ಕೌಶಲಗಳನ್ನು ಬೆಳೆಸಿಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳ ಪ್ರಾಯೋಗಿಕ ಕಲಿಕೆಗೆ ಪೂರಕವಾಗುವಂತೆ ಕಾಲೇಜು ನಿರಂತರವಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು" ಎಂದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ವಾಣಿಜ್ಯ ವಿಭಾಗದ ಅಧ್ಯಾಪಕಿ ಫಾತಿಮಾ ಸಫೀರಾ, ಉದ್ಯಮ ಆಡಳಿತ ವಿಭಾಗದ ಅಧ್ಯಾಪಕ ಗುರುರಾಜ್, ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ರಾಜ್ಯದ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಸ್ವಾಗತಿಸಿದರು. ವಿದ್ಯಾರ್ಥಿ ಪ್ರತಿನಿಧಿ ಸ್ಪಂದನಾ ವಂದಿಸಿ, ಧರಿತ್ರಿ ಭಿಡೆ ಕಾರ್ಯಕ್ರಮ ನಿರೂಪಿಸಿದರು.