image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಸಮಗ್ರ ನಾಲ್ಕನೇ ಸ್ಥಾನ

ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಸಮಗ್ರ ನಾಲ್ಕನೇ ಸ್ಥಾನ

ಮಂಗಳೂರು : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ '25ನೇ ಯುವ ಸಾಂಸ್ಕೃತಿಕ ಉತ್ಸವ'ದಲ್ಲಿ ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯವು ಗಮನಾರ್ಹ ಸಾಧನೆ ಮಾಡಿದ್ದು, ಸಮಗ್ರ ನಾಲ್ಕನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು 160ಕ್ಕೂ ಹೆಚ್ಚು ತಾಂತ್ರಿಕ ಕಾಲೇಜುಗಳು ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು.

​ವಿವಿಧ ಸಾಂಸ್ಕೃತಿಕ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಆಳ್ವಾಸ್ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಭಾರತೀಯ ಸಂಸ್ಕೃತಿಯ ವೈವಿಧ್ಯತೆಯನ್ನು ಅನಾವರಣಗೊಳಿಸಿದ ಮೆರವಣಿಗೆ ಸ್ಪರ್ಧೆಯಲ್ಲಿ ಕಾಲೇಜು ಪ್ರಥಮ ಸ್ಥಾನ ಗಳಿಸಿದರೆ, ಪೌರಾತ್ಯ ಸಂಗೀತ, ಬೆಸ್ಟ್ ಔಟ್ ಆಫ್ ವೇಸ್ಟ್ ಹಾಗೂ ಕ್ಲೇ ಮಾಡೆಲಿಂಗ್ ವಿಭಾಗಗಳಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಅಲ್ಲದೆ, ಏಕಾಂಕ ನಾಟಕ ಸ್ಪರ್ಧೆಯಲ್ಲಿ ಕಂಚಿನ ಪದಕ ಹಾಗೂ ಕಿರು ಪ್ರಹಸನದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಒಟ್ಟಾರೆ ಅಂಕಗಳ ಆಧಾರದ ಮೇಲೆ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದೆ.

​ವಿದ್ಯಾರ್ಥಿಗಳ ಈ ಅಮೋಘ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಹಾಗೂ ಟ್ರಸ್ಟಿ ವಿವೇಕ್ ಆಳ್ವ ಅವರು ಶ್ಲಾಘಿಸಿ ಅಭಿನಂದಿಸಿದ್ದಾರೆ. ತಾಂತ್ರಿಕ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕ್ಷೇತ್ರದಲ್ಲೂ ವಿದ್ಯಾರ್ಥಿಗಳು ತೋರುತ್ತಿರುವ ಆಸಕ್ತಿ ಮತ್ತು ಸಾಧನೆಗೆ ಕಾಲೇಜಿನ ಮಂಡಳಿಯು ಮೆಚ್ಚುಗೆ ವ್ಯಕ್ತಪಡಿಸಿದೆ.

Category
ಕರಾವಳಿ ತರಂಗಿಣಿ