image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬ್ರಹ್ಮರಕೂಟ್ಲು ಟೋಲ್‌ಗೇಟ್‌ ತೆರವಿಗೆ ಆಗ್ರಹ: ಇಂದು ಬೃಹತ್‌ ಜನಾಂದೋಲನ ನಡಿಗೆ

ಬ್ರಹ್ಮರಕೂಟ್ಲು ಟೋಲ್‌ಗೇಟ್‌ ತೆರವಿಗೆ ಆಗ್ರಹ: ಇಂದು ಬೃಹತ್‌ ಜನಾಂದೋಲನ ನಡಿಗೆ

ಮಂಗಳೂರು: ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ 23 ವರ್ಷಗಳಿಂದ ನಿಯಮ ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ ಟೋಲ್‌ಗೇಟ್ ಅನ್ನು ಸಂಪೂರ್ಣವಾಗಿ ಮುಚ್ಚಬೇಕೆಂದು ಆಗ್ರಹಿಸಿ ಏಪ್ರಿಲ್‌ 28ರ ಮಂಗಳವಾರದಂದು ಬೃಹತ್‌ ಜನಾಂದೋಲನ ನಡಿಗೆ ಹಮ್ಮಿಕೊಳ್ಳಲಾಗಿದೆ.

ಟೋಲ್‌ ಗೇಟ್ ತೆರವು ಹೋರಾಟ ಸಮಿತಿಯ ಗೌರವಾಧ್ಯಕ್ಷ ಹಾಗೂ ಕಾಂಗ್ರೆಸ್‌ ನಾಯಕ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದ್ದು, ಬಿ.ಸಿ. ರೋಡ್‌ನ ನಾರಾಯಣಗುರು ವೃತ್ತದಿಂದ ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ವರೆಗೆ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಸೋಮವಾರ ಗುರುಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ರಮಾನಾಥ ರೈ ಅವರು, ವಾಹನ ಸವಾರರಿಗೆ ಕನಿಷ್ಠ ಮೂಲಸೌಕರ್ಯ ನೀಡದೆ ಕಾನೂನು ಬಾಹಿರವಾಗಿ ನಡೆಯುತ್ತಿರುವ ಈ ಟೋಲ್ ವಿರುದ್ಧ ಎಲ್ಲರೂ ಒಗ್ಗೂಡಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿಯಮಾವಳಿಗಳ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕು. ಟೋಲ್ ಸಂಗ್ರಹ ಶಾಶ್ವತವಾಗಿ ನಿಲ್ಲುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
ಸಭೆಯಲ್ಲಿ ಗುರುಪುರ ಕಾಂಗ್ರೆಸ್‌ ಅಧ್ಯಕ್ಷ ಬಿ.ಎಲ್.ಪಿ. ಪದ್ಮನಾಭ ಕೋಟ್ಯಾನ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಕೆಪಿಸಿಸಿ ಸದಸ್ಯ ಆರ್.ಕೆ. ಪೃಥ್ವಿರಾಜ್‌, ಬುಡಾ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಪ್ರಮುಖರಾದ ಕೃಷ್ಣ ಅಮೀನ್, ಭಾಷ ಗುರುಪುರ, ಮೊಹಮ್ಮದ್ ಉಂಙ ಸೇರಿದಂತೆ ಹಲವು ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ