image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಹಿಳಾ ಮೀಸಲಾತಿ ವಿಳಂಬ: ಮಂಗಳೂರಿನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ವಿಳಂಬ: ಮಂಗಳೂರಿನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಂಗಳೂರು: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಸಂಬಂಧಿಸಿದಂತೆ ರಾಜಕೀಯ ಮೇಲಾಟಗಳು ನಡೆಯುತ್ತಿರುವುದನ್ನು ಖಂಡಿಸಿ, ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜಾತ್ಯತೀತ ಜನತಾದಳ (ಜೆಡಿಎಸ್) ವತಿಯಿಂದ ಮಂಗಳವಾರ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎಸ್.ಎಲ್. ಬೋಜೆಗೌಡ , ಮಹಿಳಾ ಮೀಸಲಾತಿಯು ಕೇವಲ ರಾಜಕೀಯ ವಿಷಯವಲ್ಲ, ಅದು ದೇಶದ ಅರ್ಧ ಜನಸಂಖ್ಯೆಯ ಹಕ್ಕಿನ ಹೋರಾಟವಾಗಿದೆ. ರಾಜಕೀಯ ಲಾಭಕ್ಕಾಗಿ ಈ ಪ್ರಕ್ರಿಯೆಯನ್ನು ತಡೆಹಿಡಿಯುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳನ್ನು ಪ್ರಸ್ತಾಪಿಸಿದ ಅವರು, ಮಹಿಳೆಯರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ವಿರೋಧ ಪಕ್ಷಗಳು ಅಸಹಕಾರ ತೋರುತ್ತಿರುವುದು ಖಂಡನೀಯ ಎಂದರು.

​ಕೇಂದ್ರದ ಎನ್‌ಡಿಎ ಸರ್ಕಾರ ಮಸೂದೆಯನ್ನು ಜಾರಿಗೊಳಿಸಲು ಉತ್ಸುಕವಾಗಿದ್ದರೂ, ಕಾಂಗ್ರೆಸ್ ಈ ಹಿಂದೆ ತನ್ನ ಆಡಳಿತಾವಧಿಯಲ್ಲಿ ನಿರ್ಲಕ್ಷ್ಯ ವಹಿಸಿತ್ತು ಮತ್ತು ಈಗಲೂ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಅವರು ಟೀಕಿಸಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಅಂದೇ 33% ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದ್ದರು ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಮೂಲಕ ಐತಿಹಾಸಿಕ ಕ್ರಾಂತಿ ಮಾಡಿದ್ದರು ಎಂದು ಅವರು ಸ್ಮರಿಸಿದರು. ​ಪ್ರಸ್ತುತ ಲೋಕಸಭೆಯಲ್ಲಿ ಮಹಿಳೆಯರ ಪ್ರಾತಿನಿಧ್ಯ ಕೇವಲ 14% ಇದೆ. ಈ ಮೀಸಲಾತಿ ಜಾರಿಯಾದರೆ ಮಾತ್ರ ಮಹಿಳೆಯರು ರಾಜಕೀಯವಾಗಿ ಸಬಲರಾಗಲು ಸಾಧ್ಯ ಎಂದು ಬೋಜೆಗೌಡರು ಅಭಿಪ್ರಾಯಪಟ್ಟರು. ಇದೇ ವೇಳೆ, ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಲೋಕಸಭಾ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವುದು ಇಂದಿನ ಅನಿವಾರ್ಯತೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

​ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಮತ್ತು ರಾಜ್ಯ ಉಪಾಧ್ಯಕ್ಷ ಎಂ.ಬಿ. ಸದಾಶಿವ ಮಾತನಾಡಿ, ಮಹಿಳಾ ಮೀಸಲಾತಿಗೆ ಜೆಡಿಎಸ್ ಸದಾ ಬದ್ಧವಾಗಿದ್ದು, ಮಸೂದೆಗೆ ಅಡ್ಡಿಪಡಿಸುವ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಕುಂಞಿ, ಜಿಲ್ಲಾ ಕಾರ್ಯಾಧ್ಯಕ್ಷ ಶಶಿರಾಜ್ ಶೆಟ್ಟಿ ಕೊಳಂಬೆ, ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ, ಮೀನುಗಾರ ಘಟಕದ ಅಧ್ಯಕ್ಷ ರತ್ನಾಕರ್ ಸುವರ್ಣ ಸೇರಿದಂತೆ ವಸಂತ್ ಪೂಜಾರಿ, ಇಕ್ಬಾಲ್ ಮುಲ್ಕಿ, ಅಜೀಜ್ ಮಲಾರ್ ಹಾಗೂ ಮತ್ತಿತರ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಯೋಗೀಶ್ ಶೆಟ್ಟಿ ಜೆಪ್ಪು ಕಾರ್ಯಕ್ರಮದ ಕೊನೆಯಲ್ಲಿ ವಂದಿಸಿದರು.

Category
ಕರಾವಳಿ ತರಂಗಿಣಿ