image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ಮೂಡಬಿದಿರೆ : ಕನ್ನಡದ ಅಭಿವೃದ್ಧಿ ಹಾಗೂ ಸಂಸ್ಕೃತಿಯ ರಕ್ಷಣೆಗೆ ದಶಕಗಳಿಂದ ಮಹತ್ತರ ಕೊಡುಗೆ ನೀಡುತ್ತಾ ಬಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಆಶ್ರಯದಲ್ಲಿ ಇಲ್ಲಿನ ಆಳ್ವಾಸ್ ಪದವಿ ಸ್ವಾಯತ್ತ ಕಾಲೇಜಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಭಾಗವಹಿಸಿದ್ದ ಪ್ರಾಧ್ಯಾಪಕ ರಾಮಪ್ರಸಾದ ಕಾಂಚೋಡು ಅವರು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಎಂಬುದು ಕನ್ನಡದ ಕಟ್ಟಾಳುಗಳ ನಿರಂತರ ಶ್ರಮ ಮತ್ತು ಬೆವರಿನ ಫಲವಾಗಿದೆ. ಇಂದಿನ ಕನ್ನಡ ಭಾಷೆಯ ವೈಭವ ಹಾಗೂ ಸಾಹಿತ್ಯಿಕ ಬೆಳವಣಿಗೆಯ ಹಿಂದೆ ಪರಿಷತ್ತಿನ ಅಪಾರ ಪರಿಶ್ರಮವಿದೆ. ಅಂತಹ ಮಹಾನ್ ಸಂಸ್ಥೆಯ ಹುಟ್ಟುಹಬ್ಬವನ್ನು ಆಚರಿಸುವುದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

​ಪರಿಷತ್ತಿನ ಐತಿಹಾಸಿಕ ಹಿನ್ನೆಲೆಯನ್ನು ಸ್ಮರಿಸಿದ ಅವರು, ಗ್ರಂಥ ಪ್ರಕಾಶನ, ಸಂಶೋಧನೆ, ಸಾಹಿತ್ಯ ಸಮ್ಮೇಳನಗಳ ಆಯೋಜನೆ ಹಾಗೂ ಹಳಗನ್ನಡದ ಮಹಾಕಾವ್ಯಗಳನ್ನು, ಶಾಸನಗಳನ್ನು ಸಂರಕ್ಷಿಸುವಲ್ಲಿ ಸಂಸ್ಥೆಯ ಪಾತ್ರ ಅನನ್ಯವಾದುದು. ಮೌಖಿಕ ಸಾಹಿತ್ಯವನ್ನು ಗ್ರಂಥರೂಪಕ್ಕೆ ತರುವ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ದಾಟಿಸುವ ಕೆಲಸವನ್ನು ಪರಿಷತ್ತು ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದರು. ಇಂದಿನ ಡಿಜಿಟಲ್ ಕಾಲಘಟ್ಟದಲ್ಲಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಅಭಿಮಾನ ಮೂಡಿಸುವುದು ಹಾಗೂ ತಂತ್ರಜ್ಞಾನದ ಸಹಾಯದಿಂದ ಭಾಷೆಯನ್ನು ಉಳಿಸಿ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಕರೆ ನೀಡಿದರು.

​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಅವರು ವಹಿಸಿದ್ದರು. ಆಳ್ವಾಸ್ ಪದವಿ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ. ರಾಮಕೃಷ್ಣ ಶೆಟ್ಟಿ ಪ್ರಾರ್ಥಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಯೋಗೀಶ್ ಕೈರೋಡಿ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಕನ್ನಡದ ಇತಿಹಾಸ ಮತ್ತು ಸಾಧನೆಗಳ ಬಗ್ಗೆ ಸಭಿಕರಿಗೆ ಮಾಹಿತಿ ನೀಡಲಾಯಿತು.

Category
ಕರಾವಳಿ ತರಂಗಿಣಿ