image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ರಾಜ್ಯ ಮಟ್ಟದ ‘ಗೇರು ಮೇಳ-2026’ಕ್ಕೆ ಚಾಲನೆ: ಗೇರು ಕೃಷಿ ಉತ್ತೇಜನಕ್ಕೆ ಸಚಿವ ಈಶ್ವರ ಖಂಡ್ರೆ ಕರೆ

ಮಂಗಳೂರಿನಲ್ಲಿ ರಾಜ್ಯ ಮಟ್ಟದ ‘ಗೇರು ಮೇಳ-2026’ಕ್ಕೆ ಚಾಲನೆ: ಗೇರು ಕೃಷಿ ಉತ್ತೇಜನಕ್ಕೆ ಸಚಿವ ಈಶ್ವರ ಖಂಡ್ರೆ ಕರೆ

ಮಂಗಳೂರು: ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ವತಿಯಿಂದ ನಗರದ ಕದ್ರಿ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ರಾಜ್ಯ ಮಟ್ಟದ ‘ಗೇರು ಮೇಳ-2026’ ಮತ್ತು ತಾಂತ್ರಿಕ ಕಾರ್ಯಾಗಾರಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಭಾನುವಾರ ಚಾಲನೆ ನೀಡಿದರು.

ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

​ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ಕರಾವಳಿ ಭಾಗದ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಗೇರು ಕೃಷಿಯನ್ನು ಉತ್ತೇಜಿಸಲು ಮತ್ತು ರೈತರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಇಂತಹ ಮೇಳಗಳು ಸಹಕಾರಿಯಾಗಿವೆ. ಆಧುನಿಕ ತಂತ್ರಜ್ಞಾನ ಹಾಗೂ ಸುಧಾರಿತ ತಳಿಗಳ ಬಳಕೆಯ ಮೂಲಕ ದೇಶಿಯವಾಗಿ ಗೇರು ಉತ್ಪಾದನೆಯನ್ನು ಹೆಚ್ಚಿಸಿ, ಸ್ವಾವಲಂಬನೆ ಸಾಧಿಸಬೇಕಾಗಿದೆ ಎಂದು ಕರೆ ನೀಡಿದರು. ಗೇರು ಕೃಷಿ ವಿಸ್ತರಣೆ ಮತ್ತು ರೈತರ ಆದಾಯ ಹೆಚ್ಚಳಕ್ಕೆ ಸರ್ಕಾರ ಸದಾ ಬೆಂಬಲ ನೀಡಲಿದೆ ಎಂದರು. ಇದೇ ಸಂದರ್ಭದಲ್ಲಿ ಗೇರು ಕೃಷಿಯಲ್ಲಿ ಗಮನಾರ್ಹ ಸಾಧನೆ ಮಾಡಿದ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು.

ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿ, ‘ಮನೆಗೊಂದು ಗೇರು’ ಅಭಿಯಾನದ ಅಡಿಯಲ್ಲಿ ಸಾರ್ವಜನಿಕರಿಗೆ ಉಚಿತ ಗೇರು ಸಸಿಗಳನ್ನು ವಿತರಿಸಲಾಗುತ್ತಿದೆ. ಮೇಳದಲ್ಲಿ ಸಾರ್ವಜನಿಕರಿಗೆ ಉಚಿತ ಗೇರು ಹಣ್ಣಿನ ಜ್ಯೂಸ್ ವ್ಯವಸ್ಥೆ ಹಾಗೂ ರೈತರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದರು. ಕದ್ರಿ ಉದ್ಯಾನವನದಲ್ಲಿ ಒಟ್ಟು 70ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದ್ದು, ವಿವಿಧ ಗೇರು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ಇದರೊಂದಿಗೆ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಭಾಷಣ ಸ್ಪರ್ಧೆ ಹಾಗೂ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ದೇವದಾಸ್ ಕಾಪಿಕಾಡ್ ತಂಡದಿಂದ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಿ. ವೇದವ್ಯಾಸ ಕಾಮತ್ ವಹಿಸಿದ್ದರು. ವೇದಿಕೆಯಲ್ಲಿ ಶಾಸಕರುಗಳಾದ ರಾಜೇಗೌಡ, ಅಶೋಕ್ ಕುಮಾರ್ ರೈ, ಮಾಜಿ ಸಚಿವ ರಮಾನಾಥ ರೈ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಮಲಾ ಕಾರ್ತಿಕೇಯನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಇನ್ನು ಸೋಮವಾರದವರೆಗೆ (ಮೇ 18) ಮೇಳ ಮುಂದುವರಿಯಲಿದ್ದು, ದೇಶದ ಪ್ರಮುಖ ಕೃಷಿ ವಿಜ್ಞಾನಿಗಳಿಂದ 'ಆತ್ಮನಿರ್ಭರ್-2035' ಮತ್ತು ಗೇರು ಮೌಲ್ಯವರ್ಧನೆ ಕುರಿತು ತಾಂತ್ರಿಕ ಗೋಷ್ಠಿಗಳು ನಡೆಯಲಿವೆ.

Category
ಕರಾವಳಿ ತರಂಗಿಣಿ