ಮಂಗಳೂರು: ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ಅತ್ಯಂತ ನಿಷ್ಠೆಯಿಂದ ನಿಭಾಯಿಸುತ್ತಿದ್ದಾರೆ. ಇಂತಹ ಪ್ರಾಮಾಣಿಕ ಪತ್ರಕರ್ತರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ತಿಳಿಸಿದ್ದಾರೆ.
ನಗರದ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ಭಾನುವಾರ ನಡೆದ 'ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ'ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಘಟನೆ ನಡೆದಾಗ ಪೊಲೀಸರಷ್ಟೇ ವೇಗವಾಗಿ ಸ್ಥಳಕ್ಕೆ ಧಾವಿಸಿ, ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗದಂತೆ ವಿವೇಚನೆಯಿಂದ ವರದಿ ಮಾಡುವ ಪತ್ರಕರ್ತರ ಬದ್ಧತೆ ನಿಜಕ್ಕೂ ಶ್ಲಾಘನೀಯ ಎಂದು ಅವರು ಪ್ರಶಂಸಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಸೇವಕ ಹಾಗೂ ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಅವರಿಗೆ 2026ನೇ ಸಾಲಿನ 'ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ'ಯನ್ನು ಪ್ರದಾನ ಮಾಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನ ನೆರವೇರಿಸಿದ ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಎಚ್. ಎನ್. ಮಿಥುನ್ ಮಾತನಾಡಿ, ಮಂಗಳೂರಿನ ಪತ್ರಕರ್ತರು ಸಂಯಮ ಮತ್ತು ಸಾಮಾಜಿಕ ಕಳಕಳಿಯಿಂದ ಕೆಲಸ ಮಾಡುತ್ತಿದ್ದಾರೆ. ಇಂತಹ ನಿಸ್ವಾರ್ಥ ಸೇವಕರನ್ನು ಗುರುತಿಸಿ ಗೌರವಿಸುವ ಮೂಲಕ ಪ್ರೆಸ್ ಕ್ಲಬ್ ಸಮಾಜಕ್ಕೆ ಅತ್ಯುತ್ತಮ ಸಂದೇಶ ನೀಡಿದೆ ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೆಡ್‌ಕ್ರಾಸ್ ಸೊಸೈಟಿ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅವರು ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ ಅವರು ವಿವಿಧ ಸಾಧಕರನ್ನು ಗೌರವಿಸಿದರು. ವೇದಿಕೆಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಹಾಗೂ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಹಮ್ಮದ್ ಆರಿಫ್ ಪಡುಬಿದ್ರಿ, ಆತ್ಮಭೂಷಣ್ ಭಟ್, ವಿಲ್ಫ್ರೆಡ್ ಡಿಸೋಜಾ, ದಯಾ ಕುಕ್ಕಾಜೆ ಹಾಗೂ ವಿಜಯ ಕೋಟ್ಯಾನ್ ಪಡು ಅವರು ಸನ್ಮಾನಿತರನ್ನು ಪರಿಚಯಿಸಿದರು. ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಸ್ವಾಗತಿಸಿ ವಂದಿಸಿದರು. ಲೋಕೇಶ್ ರೈ ಕಾರ್ಯಕ್ರಮ ನಿರೂಪಿಸಿದರು.
ಇದೇ ವೇದಿಕೆಯಲ್ಲಿ ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ ವೈ., ಹರ್ಷ, ರೇಮಂಡ್ ಡಿಕೂನಾ ಮತ್ತು ಆರ್.ಎಂ. ರಾಜೇಂದ್ರನ್ ಅವರಿಗೆ 'ಪ್ರೆಸ್ ಗೌರವ ಸನ್ಮಾನ' ನೀಡಿ ಗೌರವಿಸಲಾಯಿತು. ಇದರೊಂದಿಗೆ ಮಾಧ್ಯಮ ಅಕಾಡೆಮಿ ವಿಶೇಷ ಪ್ರಶಸ್ತಿ ಪುರಸ್ಕೃತ ಆನಂದ ಶೆಟ್ಟಿ, ಕೆಯುಡಬ್ಲ್ಯುಜೆ ಪ್ರಶಸ್ತಿ ಪುರಸ್ಕೃತ ರಾಮಕೃಷ್ಣ ಆರ್., ರಾಜೇಶ್ ಶೆಟ್ಟಿ ದೋಟ, ಅಬ್ದುಲ್ ರಹಿಮಾನ್ ಟಿ., ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸತೀಶ್ ಇರಾ, ರಾಜೇಶ್ ಶೆಟ್ಟಿ ದಡ್ಡಂಗಡಿ, ಎ.ಕೆ. ಕುಕ್ಕಿಲ ಮತ್ತು ಸುಳ್ಯ ತಾಲೂಕು ಕಸಾಪ ಪ್ರಶಸ್ತಿ ಪುರಸ್ಕೃತ ಹರೀಶ್ ಮೋಟುಕಾನ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.