image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಕ್ಷದ ಸಿದ್ಧಾಂತಕ್ಕೆ ಎಂದಿಗೂ ರಾಜಿಯಾಗದ ಬಿಜೆಪಿ: ರಾಧಾಮೋಹನ್‌ದಾಸ್ ಅಗರವಾಲ್

ಪಕ್ಷದ ಸಿದ್ಧಾಂತಕ್ಕೆ ಎಂದಿಗೂ ರಾಜಿಯಾಗದ ಬಿಜೆಪಿ: ರಾಧಾಮೋಹನ್‌ದಾಸ್ ಅಗರವಾಲ್

ಮಂಗಳೂರು: ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿರುವ ಭಾರತೀಯ ಜನತಾ ಪಾರ್ಟಿಯು ತನ್ನ ಹುಟ್ಟಿನಿಂದ ಈವರೆಗೂ ವೈಚಾರಿಕ ಶುದ್ಧತೆಯನ್ನು ಕಾಪಾಡಿಕೊಂಡು ಬಂದಿದ್ದು, ಯಾವುದೇ ಸಂದರ್ಭದಲ್ಲೂ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಂಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಾಧಾಮೋಹನ್‌ದಾಸ್ ಅಗರವಾಲ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಸಂಘನಿಕೇತನದಲ್ಲಿ ನಡೆದ ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026ರ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಎರಡು ದಿನಗಳ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಅವರ ಏಕಾತ್ಮತಾ ಮಾನವತಾವಾದದ ಸಿದ್ಧಾಂತದಡಿ ಪಕ್ಷ ಮುನ್ನಡೆಯುತ್ತಿದ್ದು, ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ದೊಡ್ಡದು ಎಂಬ ಮಂತ್ರದೊಂದಿಗೆ ದೇಶದ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿದೆ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಆಶಯದಂತೆ ಜಮ್ಮು ಮತ್ತು ಕಾಶ್ಮೀರದ ಆರ್ಟಿಕಲ್ 370 ರದ್ದುಗೊಳಿಸಿದ ಕೀರ್ತಿ ಪಕ್ಷಕ್ಕೆ ಸಲ್ಲುತ್ತದೆ ಎಂದ ಅವರು, ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಎರಡು ದಿನಗಳ ಕಾಲ ನಡೆದ ಈ ಪ್ರಶಿಕ್ಷಣ ವರ್ಗವು ಅತ್ಯಂತ ಶಿಸ್ತಿನಿಂದ ಕೂಡಿದ್ದು, ಪಕ್ಷದ ಸಂಘಟನೆಗೆ ಬಲ ತುಂಬಲಿದೆ ಎಂದರು. ಈ ವೇಳೆ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಡಾ. ವೈ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಶಾಸಕ ಯಶ್‌ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಕಿಶೋರ್ ಕುಮಾರ್ ಪುತ್ತೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ