ಮಂಗಳೂರು : ಮಂಗಳೂರು ನಗರ ಪೊಲೀಸ್ ಘಟಕ ಮತ್ತು ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅವರ ಕುಟುಂಬದವರಿಗಾಗಿ ವಿಶೇಷ ಯೋಗ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ನಗರದ ಪುರಭವನದಲ್ಲಿ ನಡೆದ ಈ ಕಾರ್ಯಕ್ರಮವನ್ನು ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಉಮೇಶ್ ಪಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಶಿಬಿರದಲ್ಲಿ ದೇವಿಕಾ ಯೋಗ ಕೇಂದ್ರದ ಯೋಗ ವಿಜ್ಞಾನ ಶಿಕ್ಷಕಿ ಶ್ರೀಮತಿ ದೇವಿಕಾ ಪುರುಷೋತ್ತಮ ಅವರು ತರಬೇತಿ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಎಸಿಪಿ ಗೀತಾ ಕುಲಕರ್ಣಿ ಅವರು, ಪೊಲೀಸರು ಸದಾ ಕಠಿಣ ಪರಿಸ್ಥಿತಿ ಹಾಗೂ ತೀವ್ರ ಒತ್ತಡದ ನಡುವೆ ಕೆಲಸ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಅತ್ಯಂತ ಸಹಕಾರಿಯಾಗಿದೆ. ಜೀವನದಲ್ಲಿ ಶಿಸ್ತು ಹಾಗೂ ಸಂಯಮವನ್ನು ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಯೋಗವನ್ನು ತಮ್ಮ ದಿನಚರಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಸಿಸಿಆರ್‌ಬಿ ಎಸಿಪಿ ಕೃಷ್ಣಮೂರ್ತಿ, ಯೋಗ ಗುರು ದೇವಿಕಾ ಪುರುಷೋತ್ತಮ ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಎಎಸ್ಐ ಲಕ್ಷ್ಮೀಶ ಅವರು ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರೆ, ಎಸಿಪಿ ಕೃಷ್ಣಮೂರ್ತಿ ಅವರು ಆಗಮಿಸಿದ ಎಲ್ಲ ಗಣ್ಯರಿಗೆ ಹಾಗೂ ಸಿಬ್ಬಂದಿಗೆ ಧನ್ಯವಾದಗಳನ್ನು ಸಮರ್ಪಿಸಿದರು.