ಮಂಗಳೂರು: ಯುವ ಸಮುದಾಯ ತಂಬಾಕು ಉತ್ಪನ್ನಗಳಿಂದ ದೂರವಿರುವುದು ಮಾತ್ರವಲ್ಲದೆ, ಅದರ ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಹಂಪನಕಟ್ಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿನ್ಸೆಂಟ್ ಅಂತೋನಿ ಮಸ್ಕರೇನ್ಹಸ್ ಕರೆ ನೀಡಿದ್ದಾರೆ. ತಂಬಾಕಿನ ವಿರುದ್ಧ ವಿದ್ಯಾರ್ಥಿಗಳು ಕೈಗೊಳ್ಳುವ ಇಂತಹ ಜಾಗೃತಿ ಅಭಿಯಾನಗಳು ಸಮಾಜದಲ್ಲಿ ಮಹತ್ವದ ಬದಲಾವಣೆ ತರಬಲ್ಲವು ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ನಾಂದಿಯಾಗಲಿವೆ ಎಂದು ಅವರು ಆಶಯ ವ್ಯಕ್ತಪಡಿಸಿದರು. ನಗರದ ಹಂಪನಕಟ್ಟೆ ಸರ್ಕಾರಿ ಪ.ಪೂ.ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಈ ಕಾರ್ಯಕ್ರಮವನ್ನು ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ, ಹಂಪನಕಟ್ಟೆ ಸರ್ಕಾರಿ ಪ.ಪೂ.ಕಾಲೇಜು, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರು, ವಿದ್ಯಾರ್ಥಿಗಳು ತಂಬಾಕು ಸೇವನೆ ಮತ್ತು ಧೂಮಪಾನದಂತಹ ಮಾರಕ ದುಶ್ಚಟಗಳಿಂದ ದೂರವಿರಲು ದೃಢ ನಿರ್ಧಾರ ಕೈಗೊಂಡರೆ ಮಾತ್ರ ಅವರ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಲೋಚಕರಾದ ಪುಂಡಲೀಕ ಲಕಾಟೆ ಮತ್ತು ವೆನ್ಲಾಕ್ ಆಸ್ಪತ್ರೆಯ ತಂಬಾಕು ನಿಯಂತ್ರಣ ಕೇಂದ್ರದ ಸಮಾಲೋಚಕ ವಿಜಯಕುಮಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ತಂಬಾಕು ಬಳಕೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ರೆಡ್‌ಕ್ರಾಸ್ ಸೊಸೈಟಿಯ ಜಿಲ್ಲಾ ಘಟಕದ ಖಜಾಂಜಿ ಗುರುದತ್ ನಾಯಕ್, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಹಾಗೂ ಕಾಲೇಜಿನ ಹಿರಿಯ ಉಪನ್ಯಾಸಕಿ ಶ್ಯಾಮಲಾ ಉಪಸ್ಥಿತರಿದ್ದರು. ಯೂತ್ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ.ಸುಮನ.ಬಿ. ಸ್ವಾಗತಿಸಿದರೆ, ಕಾರ್ಯಕ್ರಮದ ಸಂಯೋಜಕಿ ಮಲ್ಲಿಕಾ ವಂದಿಸಿದರು. ಉಪನ್ಯಾಸಕ ರಮೇಶ್.ಎಂ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.