ಮಂಗಳೂರು: ಜನತಾದಳ ಜಾತ್ಯಾತೀತ (ಜೆಡಿಎಸ್) ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಮಹತ್ವದ ಸಭೆಯು ಮಂಗಳವಾರ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಜಿಲ್ಲಾಧ್ಯಕ್ಷೆ ಶ್ರೀಮತಿ ರಮೀಝಾ ನಾಸೀರ್ ಅವರ ಅಧ್ಯಕ್ಷತೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರು, ಪಕ್ಷದ ಸಂಘಟನೆ ಬಲವರ್ಧನೆಯಲ್ಲಿ ಮಹಿಳಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಮಹಿಳೆಯರು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ-ಸಿದ್ಧಾಂತಗಳನ್ನು ಜನರಿಗೆ ತಲುಪಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು, ಪಕ್ಷದ ಸಂಘಟನಾ ಚಟುವಟಿಕೆಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿ, ತಳಮಟ್ಟದಲ್ಲಿ ಸಂಘಟನೆ ಬಲಪಡಿಸಲು ಮಹಿಳಾ ಕಾರ್ಯಕರ್ತೆಯರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ಮಹಿಳಾ ಘಟಕವನ್ನು ವಿಸ್ತರಿಸುವುದು, ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳುವುದು ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಕುರಿತು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷರಾದ ಇಕ್ಬಲ್ ಮುಲ್ಕಿ, ಶಶಿರಾಜ್ ಶೆಟ್ಟಿ ಕೊಳಂಬೆ, ರಾಜ್ಯ ಮೀನುಗಾರ ಘಟಕದ ಅಧ್ಯಕ್ಷ ರತ್ನಾಕರ್ ಸುವರ್ಣ, ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ಮಹಿಳಾ ಘಟಕದ ಮುಖಂಡರಾದ ಅಮರ ಶ್ರೀ ಶೆಟ್ಟಿ, ದಿವ್ಯ ಪ್ರಭಾ ಗೌಡ, ಜ್ಯೋತಿ ಜೈನ್, ಮಾಜಿ ಕಾರ್ಪೊರೇಟರ್ ಅಜೀಜ್ ಕುದ್ರೋಳಿ, ಎನ್.ಪಿ. ಪುಷ್ಪರಾಜನ್ ಸೇರಿದಂತೆ ಹಲವು ಪ್ರಮುಖ ಮುಖಂಡರು ಭಾಗವಹಿಸಿದ್ದರು. ಸಭೆಯ ಆರಂಭದಲ್ಲಿ ಶಾರದ ಶೆಟ್ಟಿ ಅತ್ತಾವರ ಪ್ರಾರ್ಥಿಸಿದರು, ಚೂಡಮಣಿ ಸ್ವಾಗತಿಸಿದರು. ಕೊನೆಯಲ್ಲಿ ಅಧ್ಯಕ್ಷೆ ರಮೀಝಾ ನಾಸೀರ್ ಅವರು ಸಮಸ್ತ ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿ, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.