ಮಂಗಳೂರು: ದಲಿತೋದ್ಧಾರಕ ಕುದ್ಮುಲ್ ರಂಗರಾಯರ ಜಯಂತಿಯನ್ನು ಮಂಗಳೂರು ಮಹಾನಗರ ಪಾಲಿಕೆ ವತಿಯಿಂದಲೇ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಪಾಲಿಕೆಯ ಕಚೇರಿಯಲ್ಲಿ ನಡೆದ ದಲಿತ ಮುಖಂಡರು ಮತ್ತು ಪಾಲಿಕೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಬಾರಿ ಪಾಲಿಕೆ ವತಿಯಿಂದ ಜಯಂತಿ ಆಚರಿಸದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ತಪ್ಪುಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಈ ಹಿಂದೆ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಯಂತಿ ನಡೆಸಲು ಕೈಗೊಂಡಿದ್ದ ನಿರ್ಣಯದಂತೆ, ಈ ಬಾರಿಯೂ ಅದೇ ಮಾದರಿಯನ್ನು ಮುಂದುವರಿಸಬೇಕು. ಕಾರ್ಯಕ್ರಮಕ್ಕೆ ಅಗತ್ಯವಿರುವ ಅನುದಾನವನ್ನು ಪಾಲಿಕೆ ವತಿಯಿಂದಲೇ ಮೀಸಲಿಡಬೇಕು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಉಪ ಆಯುಕ್ತ ನರೇಶ್ ಶೆಣೈ, ಸಮಾಜ ಕಲ್ಯಾಣ ಇಲಾಖೆಯ ಸುರೇಶ್ ಅಡಿಗ, ಮಾಲಿನಿ, ನಿಕಟಪೂರ್ವ ಪಾಲಿಕೆ ಸದಸ್ಯ ಶೈಲೇಶ್ ಶೆಟ್ಟಿ, ಶಿವುಕುಮಾರ್ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.