ಮಂಗಳೂರು : ಮಂಗಳೂರಿನ ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ನಾಲ್ಕು ದಿನಗಳ ವಸತಿ ಸಹಿತ ‘ಪ್ರಗತಿ, ಸ್ಪೂರ್ತಿ ಮತ್ತು ಉನ್ನತಿ–2026’ ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಾಭಿವೃದ್ಧಿ ಕಾರ್ಯಾಗಾರಕ್ಕೆ ಗುರುವಾರ ಅದ್ಧೂರಿ ಚಾಲನೆ ಸಿಕ್ಕಿತು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಸಿಎ. ನಂದಗೋಪಾಲ ಶೆಣೈ ಅವರು, ಶಿಕ್ಷಣವೆಂದರೆ ಕೇವಲ ಪಠ್ಯದ ಜ್ಞಾನವಲ್ಲ, ಅದು ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯನ್ನು ರೂಪಿಸುವ ಪ್ರಕ್ರಿಯೆಯಾಗಿದೆ. ಜ್ಞಾನದ ಜೊತೆಗೆ ಕೌಶಲ್ಯ, ಮೌಲ್ಯ ಹಾಗೂ ಸೇವಾ ಮನೋಭಾವ ಸೇರಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಮಾತೃಭಾಷೆ ಕೊಂಕಣಿಯು ನಮ್ಮ ಅಸ್ತಿತ್ವದ ಸಂಕೇತವಾಗಿದ್ದು, ಯುವ ಪೀಳಿಗೆಯಲ್ಲಿ ಆತ್ಮವಿಶ್ವಾಸ ಮತ್ತು ಸಾಂಸ್ಕೃತಿಕ ಪ್ರಜ್ಞೆಯನ್ನು ಮೂಡಿಸುತ್ತದೆ ಎಂದು ತಿಳಿಸಿದರು.
ವಿಶ್ವ ಕೊಂಕಣಿ ಕೇಂದ್ರದ ಉಪಾಧ್ಯಕ್ಷ ಡಿ. ರಮೇಶ ನಾಯಕ್ ಮೈರಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಂವಹನ ಕೌಶಲ್ಯ, ನಾಯಕತ್ವ ಗುಣ, ಸಮಯ ನಿರ್ವಹಣೆ ಮತ್ತು ತಂತ್ರಜ್ಞಾನದ ಜ್ಞಾನವನ್ನು ಬೆಳೆಸಿಕೊಳ್ಳಬೇಕು. ಸದ್ಯ ಮೂರು ಹಂತಗಳಲ್ಲಿ ನಡೆಯುತ್ತಿರುವ ಈ ಶಿಬಿರದಲ್ಲಿ ಸುಮಾರು 75 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಇದರ ಸಂಪೂರ್ಣ ಪ್ರಯೋಜನ ಪಡೆಯಬೇಕು ಎಂದು ಕರೆ ನೀಡಿದರು. ಮತ್ತೊಬ್ಬ ಹಿರಿಯ ಉಪಾಧ್ಯಕ್ಷ ವಿಲಿಯಂ ಡಿಸೋಜಾ ಮಾತನಾಡಿ, ಇಂತಹ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಮಾನತೆ, ಸ್ನೇಹ ಹಾಗೂ ಸಾಮಾಜಿಕ ಬಾಂಧವ್ಯವನ್ನು ಗಟ್ಟಿಗೊಳಿಸುತ್ತವೆ ಎಂದರು. ಕಾರ್ಯಕ್ರಮದಲ್ಲಿ ವಿಶ್ವ ಕೊಂಕಣಿ ಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಡಾ. ಬಿ. ದೇವದಾಸ್ ಪೈ, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಪ್ರಭು ವಗ್ಗ, ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷ ದಯಾನಂದ ನಾಯಕ್ ಪುಂಜಾಲಕಟ್ಟೆ, ಕಾರ್ಯದರ್ಶಿ ಸುಧಾಕರ ಪ್ರಭು ಪೆರ್ಮರೋಡಿ ಹಾಗೂ ಪ್ರಮುಖರಾದ ಸುರೇಂದ್ರ ಸಾಮಂತ್, ಮೋಹನ್ ನಾಯಕ್ ಒಡ್ಡೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮುಖ್ಯ ತರಬೇತುದಾರರಾದ ಕುಡ್ಪಿ ವಿದ್ಯಾಶೆಣೈ ಅವರು ಶಿಬಿರದ ಉದ್ದೇಶ ಮತ್ತು ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಡಾ. ವಿಜಯಲಕ್ಷ್ಮಿ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ನಾಲ್ಕು ದಿನಗಳ ಕಾಲ ನಡೆಯಲಿರುವ ಈ ಶಿಬಿರದಲ್ಲಿ ಸಂವಹನ ಕೌಶಲ್ಯ, ನಾಯಕತ್ವ ತರಬೇತಿ, ಸಾಂಸ್ಕೃತಿಕ ಅರಿವು ಹಾಗೂ ಉದ್ಯೋಗಾಭಿಮುಖ ಕೌಶಲ್ಯಗಳ ಬಗ್ಗೆ ವಿಶೇಷ ತರಬೇತಿ ನೀಡಲಾಗುತ್ತಿದ್ದು, ಇದು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.