ಮಂಗಳೂರು : 2028ರಲ್ಲಿ ಶತಮಾನೋತ್ಸವದ ಸಂಭ್ರಮವನ್ನು ಆಚರಿಸಲಿರುವ ತುಳುವ ಮಹಾಸಭೆಯ ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕೇಂದ್ರೀಯ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ. ಅವಿನ್ ಬಿ. ಆರ್. ಆಳ್ವ, ಪ್ರಧಾನ ಕಾರ್ಯದರ್ಶಿಯಾಗಿ ಅರವಿಂದ ಬೆಳ್ಚಾಡ ಹಾಗೂ ಪ್ರಧಾನ ಸಂಚಾಲಕರಾಗಿ ವಿಶ್ವನಾಥ ಆಚಾರ್ಯ ಪೆರ್ಡೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
2028ರ ವೇಳೆಗೆ ತುಳುವ ಮಹಾಸಭೆಯು ಯಶಸ್ವಿಯಾಗಿ 100 ವರ್ಷಗಳನ್ನು ಪೂರೈಸಲಿರುವ ಹಿನ್ನೆಲೆಯಲ್ಲಿ, ಈ ಐತಿಹಾಸಿಕ ಶತಮಾನೋತ್ಸವವನ್ನು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ಮುಂಬರುವ ದಿನಗಳಲ್ಲಿ ಸಾಂಸ್ಕೃತಿಕ ಮತ್ತು ಸಾಮಾಜಿಕ ಮಹತ್ವದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ತಿಳಿಸಿದೆ. ಇದರೊಂದಿಗೆ, ತುಳು ಭಾಷೆಯ ಸಮಗ್ರ ಅಭಿವೃದ್ಧಿ, ತುಳು ಭಾಷೆಗೆ ಸಂವಿಧಾನಾತ್ಮಕ ಮಾನ್ಯತೆ ದೊರಕಿಸಿಕೊಡಲು ನಿರಂತರ ಪ್ರಯತ್ನ, ಭಾಷಾ ಸಂಶೋಧನೆ, ತುಳುನಾಡಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಹಾಗೂ ಜಗತ್ತಿನಾದ್ಯಂತ ಹರಡಿಕೊಂಡಿರುವ ತುಳುವ ಸಮುದಾಯವನ್ನು ಒಂದೇ ವೇದಿಕೆಯಡಿ ಸಂಘಟಿಸುವ ಪ್ರಮುಖ ಕಾರ್ಯಗಳಿಗೆ ಮುಂಬರುವ ದಿನಗಳಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ನೂತನ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.