ಮಂಗಳೂರು : ಸ್ಮಾರ್ಟ್ ಸಿಟಿ ಮಂಗಳೂರಿನಲ್ಲಿ ತೀವ್ರವಾಗಿ ಹದಗೆಟ್ಟಿರುವ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲು ಸಾರ್ವಜನಿಕ ಉದ್ಯಮಗಳ ಸಮಿತಿಯು ಕಾಲಮಿತಿಯ ಸಮಗ್ರ ಯೋಜನೆಯನ್ನು ಸಿದ್ಧಪಡಿಸಿ ಅನುಷ್ಠಾನಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ತಿಳಿಸಿದ್ದಾರೆ. ಲಾಲ್‌ಬಾಗ್‌ನ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಮಂಡಲಗಳ 20 ಮಂದಿ ಶಾಸಕರನ್ನೊಳಗೊಂಡ ಸಮಿತಿಯು ಮಂಗಳೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಆಧಾರದ ಮೇಲೆ ಈ ವರದಿಯನ್ನು ನೀಡಿದೆ ಎಂದರು. ಈ ಯೋಜನೆಯ ಅನುಷ್ಠಾನಕ್ಕಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚಕರನ್ನು ನೇಮಕ ಮಾಡಲು ನಗರಾಭಿವೃದ್ಧಿ ಇಲಾಖೆಯು ಸರ್ಕಾರಕ್ಕೆ ಪತ್ರ ಬರೆದಿದ್ದು, ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ ಎಂದು ಅವರು ತಿಳಿಸಿದರು.
ನಗರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ತ್ವರಿತ ನಗರೀಕರಣ ಹಾಗೂ ಸಮರ್ಪಕ ನೈರ್ಮಲ್ಯ ಮೂಲಸೌಕರ್ಯಗಳ ಅಗತ್ಯತೆಯನ್ನು ಪರಿಗಣಿಸಿ, ಗುರುತಿಸಲಾದ ಪ್ರದೇಶಗಳಲ್ಲಿ ಭೂಗತ ಒಳಚರಂಡಿ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವುದು ಅಗತ್ಯವಾಗಿದೆ. ಒಳಚರಂಡಿ ವ್ಯವಸ್ಥೆಯ ಕೊರತೆಯಿಂದ ಪರಿಸರ ಸಂಬಂಧಿ ಸಮಸ್ಯೆಗಳು, ಅನ್ವಯ್ರ್ಯ ಪರಿಸ್ಥಿತಿ, ಜಲಮೂಲಗಳ ಮಾಲಿನ್ಯ ಹಾಗೂ ಸಾರ್ವಜನಿಕರಿಗೆ ತೊಂದರೆಗಳು ಉಂಟಾಗುತ್ತಿವೆ. ಕಾಮಗಾರಿಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸುವುದರಿಂದ ಸಾರ್ವಜನಿಕ ಆರೋಗ್ಯ ಸುಧಾರಣೆ, ನೀರು ನಿಲ್ಲುವ ಸಮಸ್ಯೆ ತಡೆಗಟ್ಟುವುದು ಮತ್ತು ಸುಸ್ಥಿರ ನಗರಾಭಿವೃದ್ಧಿಗೆ ಉತ್ತೇಜನ ನೀಡಲು ಸಾಧ್ಯವಾಗುತ್ತದೆ ಎಂದು ಸಮಿತಿ ಶಿಫಾರಸು ಮಾಡಿದೆ.
ಪ್ರಸ್ತುತ ಜಲ ಸಂಸ್ಕರಣಾ ಘಟಕಗಳಿಂದ ಸಂಸ್ಕರಿಸಿದ ನೀರನ್ನು ರಾಜಕಾಲುವೆಗಳ ಮೂಲಕ ನದಿಗಳಿಗೆ ಹರಿಸಲಾಗುತ್ತಿದ್ದು, ಇದರಿಂದ ಜಲಮೂಲಗಳು ಕಲುಷಿತಗೊಳ್ಳುತ್ತಿವೆ. ಆದ್ದರಿಂದ ಹೊಸ ಯೋಜನೆಯನ್ನು ತಯಾರಿಸುವಾಗ ಸಂಸ್ಕರಿಸಿದ ನೀರನ್ನು ಮರುಬಳಕೆಗೆ ಬಳಸಲು ಅಗತ್ಯವಿರುವ ಕಾಮಗಾರಿಗಳನ್ನು ಸೇರಿಸಬೇಕು ಎಂದು ಉಲ್ಲೇಖಿಸಲಾಗಿದೆ. ಈ ಹಿಂದೆ ಕೈಗೊಂಡ ಕಾಮಗಾರಿಗಳಲ್ಲಿ ಹಲವು ನ್ಯೂನತೆಗಳಿದ್ದು, ಸಿಎಜಿಯವರು ಲೆಕ್ಕ ಪರಿಶೋಧನೆಯಲ್ಲಿ ಇದನ್ನು ಗಮನಿಸಿ ವರದಿ ಮಾಡಿದ್ದರು. ಹೊಸ ಸಮಗ್ರ ಯೋಜನೆಯಲ್ಲಿ ಇಂತಹ ಲೋಪದೋಷಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಿ ದುಂದುವೆಚ್ಚ ತಡೆಯಬೇಕಿದೆ. ಪ್ರಸ್ತಾವಿತ ಈ ಸಮಗ್ರ ಯೋಜನೆಗೆ ಸುಮಾರು 1250 ಕೋಟಿ ರೂ. ಅಗತ್ಯವಿರುವುದಾಗಿ ಪಾಲಿಕೆ ತಿಳಿಸಿದ್ದು, ಸರ್ಕಾರವು ಡಿಪಿಆರ್ ತಯಾರಿಸಿ ಅಗತ್ಯ ಆಡಳಿತಾತ್ಮಕ ಅನುಮೋದನೆಗಳು, ಅನುದಾನ ಹಂಚಿಕೆ ಹಾಗೂ ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1952ರಲ್ಲಿ ಆರಂಭಗೊಂಡ ಒಳಚರಂಡಿ ವ್ಯವಸ್ಥೆಯು ಇಂದಿನವರೆಗೂ ಅಸಮರ್ಪಕವಾಗಿಯೇ ಮುಂದುವರಿದಿದೆ. ನಗರದ ಹೃದಯ ಭಾಗದಲ್ಲಿಯೂ ಒಳಚರಂಡಿ ವ್ಯವಸ್ಥೆಗಾಗಿ ಪಿಟ್‌ಗಳನ್ನೇ ಬಳಸಲಾಗುತ್ತಿದೆ. ಬೋಳಾರಕ್ಕೆ ಇತ್ತೀಚೆಗೆ ಭೇಟಿ ನೀಡಿದಾಗ ಅಲ್ಲಿ ದೇವಸ್ಥಾನದ ಸುತ್ತಮುತ್ತಲಿನ ಮನೆಗಳ ಬಾವಿ ನೀರು ಕಲುಷಿತಗೊಂಡಿರುವುದು ಕಂಡುಬಂದಿದೆ. ಅಲ್ಲದೆ ಇತ್ತೀಚೆಗೆ ಕದ್ರಿ ಭಾಗದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಹಾಳಾಗಿ ಒಳಚರಂಡಿ ನೀರು ಸೇರಿರುವ ಬಗ್ಗೆಯೂ ವರದಿಯಾಗಿದೆ. ನಗರದ ಬಹುತೇಕ ಕಡೆಗಳಲ್ಲಿ ಒಳಚರಂಡಿ ಅವ್ಯವಸ್ಥೆಯಿಂದ ಬಾವಿ ನೀರು ಕಲುಷಿತವಾಗಿದ್ದು, ಹಲವು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕೆರೆಗಳ ನೀರು ಕೂಡ ಕೊಳಚೆಯಾಗಿದೆ.
ಈ ಬಗ್ಗೆ ಈ ಹಿಂದೆ ಪಾಲಿಕೆ ಪರಿಷತ್ ಸಭೆಯಲ್ಲಿ ಬಿಜೆಪಿ ಆಡಳಿತದ ಸಂದರ್ಭದಲ್ಲಿ ಧ್ವನಿ ಎತ್ತಿದಾಗ ಅಂದಿನ ಮೇಯರ್ ಎಲ್ಲವೂ ಸಮರ್ಪಕವಾಗಿದೆ ಎಂದು ಹೇಳಿಕೆ ನೀಡಿದ್ದರು. ಆದರೆ ಕದ್ರಿಯಲ್ಲಿ ಕಲುಷಿತ ನೀರು ಪೂರೈಕೆಯಾಗಿ ಸಾರ್ವಜನಿಕರಿಗೆ ತೊಂದರೆಯಾದಾಗ ಬಿಜೆಪಿ ಶಾಸಕರು ಅದನ್ನು ಕಾಂಗ್ರೆಸ್ ಆಡಳಿತದ ನಗರ ಪಾಲಿಕೆಯ ಕಾರಣ ಎನ್ನುತ್ತಾರೆ. ಕಳೆದ ಹಲವು ವರ್ಷಗಳಿಂದ ಹದಗೆಟ್ಟಿರುವ ಒಳಚರಂಡಿ ವ್ಯವಸ್ಥೆಯ ಬಗ್ಗೆ ಕಳೆದ ಎಂಟು ವರ್ಷಗಳಿಂದ ಶಾಸಕರಾಗಿರುವ ವೇದವ್ಯಾಸ ಕಾಮತ್ ಅವರು ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಸಮಗ್ರ ಯೋಜನೆಗೆ ಕ್ರಮ ವಹಿಸಿದ್ದಾರೆಯೇ ಎಂದು ಐವನ್ ಡಿಸೋಜಾ ಪ್ರಶ್ನಿಸಿದ್ದಾರೆ. ಇಂತಹ ರಾಜಕೀಯ ಆರೋಪ ಪ್ರತ್ಯಾರೋಪಗಳಿಂದ ಜನರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಾಧ್ಯವಿಲ್ಲ. ನಗರದ ಒಳಚರಂಡಿ ಸಮಗ್ರ ಯೋಜನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದ ಅಗತ್ಯವಿದ್ದು, ಸ್ಥಳೀಯ ಶಾಸಕರು ಮತ್ತು ಸಂಸದರು ರಾಜಕೀಯ ಬದಿಗಿಟ್ಟು ಜೊತೆಯಾಗಿ ಪ್ರಯತ್ನಿಸಬೇಕು ಎಂದು ಅವರು ಮನವಿ ಮಾಡಿದರು.