ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ಅವರನ್ನು ನವದೆಹಲಿ ಕೇಂದ್ರ ಕಚೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಯುವ ಸಬಲೀಕರಣ ಹಾಗೂ ರಾಷ್ಟ್ರ ನಿರ್ಮಾಣ ಚಟುವಟಿಕೆಗಳಲ್ಲಿ ಅವರು ಮಾಡಿರುವ ಅಪಾರ ಸೇವೆಯನ್ನು ಗುರುತಿಸಿ ಈ ಪ್ರತಿಷ್ಠಿತ ಜವಾಬ್ದಾರಿಯನ್ನು ನೀಡಲಾಗಿದೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಡಾ. ಪಿ. ಜಿ. ಆರ್. ಸಿಂಧಿಯಾ ಅವರ ಶಿಫಾರಸಿನ ಮೇರೆಗೆ, ಮುಖ್ಯ ರಾಷ್ಟ್ರೀಯ ಆಯುಕ್ತ ಡಾ. ಕೆ. ಕೆ. ಖಂಡೇಲ್ವಾಲ್ ಈ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಹೊಸ ರಾಷ್ಟ್ರೀಯ ಹುದ್ದೆಯಲ್ಲಿ ವಿವೇಕ್ ಆಳ್ವ ಅವರು ದೇಶದ ವಿವಿಧ ರಾಜ್ಯಗಳ ನಡುವೆ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳನ್ನು ರೂಪಿಸುವುದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಉನ್ನತ ಯುವ ಸಂವಾದಗಳನ್ನು ಆಯೋಜಿಸುವುದು ಹಾಗೂ ವಿವಿಧ ರಾಜ್ಯಗಳ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ನಡುವೆ ಉತ್ತಮ ಸಂಪರ್ಕ ಸೇತುವೆಯನ್ನು ಬಲಪಡಿಸುವ ಕಾರ್ಯದ ಉಸ್ತುವಾರಿ ವಹಿಸಲಿದ್ದಾರೆ. ಕಳೆದ ಹಲವು ವರ್ಷಗಳಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು, ಮೂಡುಬಿದಿರೆಯಲ್ಲಿ ನಡೆದ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು ಅತ್ಯಂತ ಯಶಸ್ವಿಯಾಗಿ ಸಂಘಟಿಸಿ ರಾಷ್ಟ್ರಮಟ್ಟದ ಪ್ರಶಂಸೆಗೆ ಪಾತ್ರರಾಗಿದ್ದರು. ಅವರ ಈ ಮಹತ್ವದ ನೇಮಕಾತಿಗೆ ಶಿಕ್ಷಣ, ಕ್ರೀಡೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಮುಖ ಗಣ್ಯರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.