ಬಂಟ್ವಾಳ: ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದ ಘಟನೆ ಇಂದು ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿ.ಸಿ.ರೋಡು- ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟ ಮಹಿಳೆಯನ್ನು ಮಂಗಳೂರು ನಗರದ ಕೊಡಿಯಾಲುಬೈಲು ನಿವಾಸಿ ಭಾಗೀರಥಿ (62) ಎಂದು ಗುರುತಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ರೂಪೇಶ್(29) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ನಗರದ ಯುನಿಟಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಚಿತ್ರಾ (32) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಮೂರು ವರ್ಷದ ಮಗು ಯಾವುದೆ ಗಾಯಗಳಿಲ್ಲದೇ ಪಾರಾಗಿದೆ.