ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿರಂತರ ಪರಿಶ್ರಮ, ದೃಢ ಸಂಕಲ್ಪ ಹಾಗೂ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಮನೋಭಾವ ಅತ್ಯಗತ್ಯ ಎಂದು ಉಜಿರೆಯ ಸಂಧ್ಯಾ ಟ್ರೇಡರ್ಸ್‌ನ ಮಾಲಕರು ಹಾಗೂ ಸಿರಿ ಸಂಸ್ಥೆಯ ನಿರ್ದೇಶಕರಾದ ಶ್ರೀ ರಾಜೇಶ್ ಪೈ ಅವರು ಹೇಳಿದರು. ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ಆಯೋಜಿಸಲಾಗಿದ್ದ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡಿದರು. ತಮ್ಮ ಉದ್ಯಮ ಪಯಣದ ಅನುಭವಗಳನ್ನು ಹಂಚಿಕೊಂಡ ಅವರು, ಉದ್ಯಮದ ಬೆಳವಣಿಗೆ, ಸವಾಲುಗಳನ್ನು ಎದುರಿಸುವ ಬಗೆ ಹಾಗೂ ಯಶಸ್ಸಿನ ಸೂತ್ರಗಳ ಕುರಿತು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ ಕುಮಾರ್ ಅವರು ಶಿಬಿರಾರ್ಥಿಗಳಿಗೆ ಶುಭ ಹಾರೈಸಿ, ಉದ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಬಿ.ಪಿ. ವಿಜಯ ಕುಮಾರ್ ಅವರು ಮಾತನಾಡಿ, ಇಂದಿನ ಆಧುನಿಕ ತಂತ್ರಜ್ಞಾನಗಳನ್ನು ಸಮರ್ಥವಾಗಿ ಬಳಸಿಕೊಂಡು ಉದ್ಯಮದಲ್ಲಿ ಪ್ರಗತಿ ಸಾಧಿಸಬೇಕು ಎಂದು ಕರೆ ನೀಡಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಶ್ರೀ ಅಬ್ರಹಾಂ ಜೇಮ್ಸ್ ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮವನ್ನು ನಿರೂಪಿಸಿದರು. ಇದಕ್ಕೂ ಮುನ್ನ ಕಾರ್ಯಕ್ರಮವು ಕುಮಾರಿ ಭೂಮಿಕಾ ಹಾಗೂ ಕುಮಾರಿ ವೈಷ್ಣವಿ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.
ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಸ್ವಾತಿಕ್ ಹೆಬ್ಬಾರ್ ಹಾಗೂ ಕುಮಾರಿ ಅನನ್ಯ ಟಿ. ಅವರು ತರಬೇತಿಯ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು. ಕೊನೆಯಲ್ಲಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಶ್ರೀ ಕರುಣಾಕರ್ ಕೆ. ಜೈನ್ ಅವರು ಧನ್ಯವಾದ ಸಮರ್ಪಿಸಿದರು.