ಮಂಗಳೂರು: ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗೊಳಿಸಲು ಹಾಗೂ ಅವುಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಗೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿ, ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಕಾಮಗಾರಿಗಳು ಕಳಪೆಯಾಗದಂತೆ ಎಚ್ಚರ ವಹಿಸಬೇಕು ಮತ್ತು ಜನರಿಗೆ ಕಲುಷಿತ ನೀರು ಪೂರೈಕೆಯಾಗದಂತೆ ನಿಯಮಿತವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಬೇಕು ಎಂದು ಆಯುಕ್ತರು ಜವಾಬ್ದಾರಿಯುತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಶೇಷವಾಗಿ ಶುದ್ಧ ಕುಡಿಯುವ ನೀರಿನ ಲಭ್ಯತೆ, ನೈರ್ಮಲ್ಯ ಮತ್ತು ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಬೇಕು. ಇದಕ್ಕೂ ಮುನ್ನ ಅವರು ಕಡಬ ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ, ಜಲ ಶುದ್ಧೀಕರಣ ಘಟಕ, ಮಲತ್ಯಾಜ್ಯ ಸಂಸ್ಕರಣಾ ಘಟಕ ಹಾಗೂ ಮೆಟೀರಿಯಲ್ ರಿಕವರಿ ಫೆಸಿಲಿಟಿ ಕಾಮಗಾರಿಗಳ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಸಲಹೆಗಳನ್ನು ನೀಡಿದರು.
ಸಭೆಯಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಮಾತನಾಡಿ, ಮುಂದಿನ ದಿನಗಳಲ್ಲಿ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ನಿರಂತರ ನೀರಿನ ಲಭ್ಯತೆಗಾಗಿ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜೆ.ಜೆ.ಎಂ. ಗುತ್ತಿಗೆದಾರರು ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.