ಮಂಗಳೂರು : ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಬರುವ 'ಮೈ ಭಾರತ್' ಸಂಸ್ಥೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಯುವಜನರ ನೋಂದಣಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 'ಮೈ ಭಾರತ್' ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ 42,778 ಮಂದಿ ಹಾಗೂ 156 ಯೂತ್ ಕ್ಲಬ್‌ಗಳು ನೋಂದಾಯಿಸಿಕೊಂಡಿವೆ. ಈ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪದವಿ ಪೂರ್ವ ಹಾಗೂ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿಶೇಷ ಅಭಿಯಾನ ನಡೆಸಿ ವಿದ್ಯಾರ್ಥಿಗಳನ್ನು ನೋಂದಾಯಿಸಬೇಕು. ಈ ಕುರಿತು ಈ ತಿಂಗಳೊಳಗೆ ಕಾರ್ಯಪ್ರವೃತ್ತರಾಗಿ ವರದಿ ನೀಡಬೇಕೆಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ರಾಜು ಕೆ. ಅವರು, ಸಂಸ್ಥೆಯ ವಿವಿಧ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಅಂತರ್‌ರಾಜ್ಯ ವಿನಿಮಯ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಚಾರ ನೀಡಿ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಇದೇ ವೇಳೆ ಮೈ ಭಾರತ್ ಉಪನಿರ್ದೇಶಕ ಉಲ್ಲಾಸ್ ಕೆ.ಟಿ. ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ವಿಕಸಿತ ಭಾರತ ಪಾದಯಾತ್ರೆ, ನಶಮುಕ್ತ ಭಾರತ ಅಭಿಯಾನ, ನಾಯಕತ್ವ ಶಿಬಿರಗಳು, ಜಾಗೃತಿ ಕಾರ್ಯಕ್ರಮಗಳು, ಸರ್ಕಾರಿ ಯೋಜನೆಗಳ ಕುರಿತು ವಿಚಾರ ಸಂಕಿರಣ, ಕ್ರೀಡಾ ಪರಿಕರ ವಿತರಣೆ, ಸ್ವಚ್ಛತಾ ಅಭಿಯಾನ, ಸ್ವ-ಉದ್ಯೋಗ ತರಬೇತಿ ಹಾಗೂ ಯೂತ್ ಪಾರ್ಲಿಮೆಂಟ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ 'ನಶ ಮುಕ್ತ ಭಾರತ ಅಭಿಯಾನ'ದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಯರಾಮ್, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಅಧಿಕಾರಿ ಪ್ರದೀಪ್ ಡಿ ಸೋಜ ಮತ್ತು ಇತರರು ಉಪಸ್ಥಿತರಿದ್ದರು.