ಉಜಿರೆ: ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿರಂತರ ಕಲಿಕೆ, ಕಠಿಣ ಪರಿಶ್ರಮ ಹಾಗೂ ಸವಾಲುಗಳನ್ನು ಧೈರ್ಯದಿಂದ ಎದುರಿಸುವ ಮನೋಭಾವ ಅತ್ಯಗತ್ಯ ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಅವರು ಹೇಳಿದರು. ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ 31 ದಿನಗಳ ಕಾಲ ನಡೆದ ಮಹಿಳಾ ಟೈಲರಿಂಗ್ ತರಬೇತಿ ಹಾಗೂ 45 ದಿನಗಳ ಕಾಲ ನಡೆದ ಕಂಪ್ಯೂಟರ್ ಡಿಟಿಪಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ ಉದ್ಯಮದ ಬೆಳವಣಿಗೆ, ಸವಾಲುಗಳನ್ನು ಎದುರಿಸುವ ಬಗೆ ಹಾಗೂ ಸ್ವಉದ್ಯೋಗದ ಅವಕಾಶಗಳ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆ, ಉಜಿರೆಯ ನಿರ್ದೇಶಕರಾದ ಸುನಿಲ್ ಜಿ. ನಾಯ್ಕೆ ಅವರು ಮಾತನಾಡಿ, ಇಂದಿನ ಆಧುನಿಕ ತಂತ್ರಜ್ಞಾನಗಳನ್ನು ಸಮರ್ಥವಾಗಿ ಬಳಸಿಕೊಂಡು ಸ್ವಉದ್ಯೋಗ ಹಾಗೂ ಉದ್ಯಮ ಕ್ಷೇತ್ರದಲ್ಲಿ ಮುನ್ನಡೆಯಬೇಕು ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಕರುಣಾಕರ್ ಕೆ. ಜೈನ್ ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಕಾರ್ಯಕ್ರಮವನ್ನು ನಿರೂಪಿಸಿ, ಕೊನೆಯಲ್ಲಿ ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮವು ಕುಮಾರಿ ವನ್ಯ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಅಂಕಿತ, ಚೈತ್ರ, ವೈಶಾಖ್ ಹಾಗೂ ಬಸವರಾಜ್ ಅವರು ತಮ್ಮ ತರಬೇತಿಯ ಅನುಭವಗಳನ್ನು ಹಂಚಿಕೊಂಡು, ಇಲ್ಲಿ ಪಡೆದ ಜ್ಞಾನ ಮತ್ತು ಕೌಶಲ್ಯಗಳು ಭವಿಷ್ಯದ ಬದುಕಿಗೆ ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.