image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರೆಡ್ ಕ್ರಾಸ್ ನಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ: ಅಂಗಾಂಗ ದಾನದ ಅರಿವು ಮೂಡಿಸುವುದು ಅಗತ್ಯ - ಡಾ. ರವಿಶಂಕರ್ ಶೆಟ್ಟಿ

ರೆಡ್ ಕ್ರಾಸ್ ನಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ: ಅಂಗಾಂಗ ದಾನದ ಅರಿವು ಮೂಡಿಸುವುದು ಅಗತ್ಯ - ಡಾ. ರವಿಶಂಕರ್ ಶೆಟ್ಟಿ

ಮಂಗಳೂರು: ಪರರ ಜೀವ ಉಳಿಸುವ ಅಂಗಾಂಗ ದಾನಕ್ಕಿಂತ ಮಿಗಿಲಾದ ದಾನವಿಲ್ಲ. ಜನತೆ ಸ್ವಯಂ ಪ್ರೇರಿತರಾಗಿ ಅಂಗಾಂಗ ದಾನಕ್ಕೆ ನೋಂದಣಿಯಾಗುವ ನಿಟ್ಟಿನಲ್ಲಿ ವ್ಯಾಪಕ ಅರಿವು ಮೂಡಿಸುವ ಅನಿವಾರ್ಯತೆ ಇದೆ ಎಂದು ಜೀವ ಸಾರ್ಥಕತೆಯ ರಾಜ್ಯ ಸಂಯೋಜಕ ಡಾ. ರವಿಶಂಕರ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಅಂಗಾಂಗ ದಾನ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಿದುಳು ನಿಷ್ಕ್ರಿಯ (ಬ್ರೈನ್ ಡೆಡ್) ಆದವರ ಅಂಗಾಂಗ ದಾನದಲ್ಲಿ ಕರ್ನಾಟಕವು ದೇಶದಲ್ಲಿ ತೃತೀಯ ಸ್ಥಾನದಲ್ಲಿದೆ. ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಮಂದಿಗೆ ಕಿಡ್ನಿ ದಾನದ ಅಗತ್ಯವಿದ್ದರೂ, ನೋಂದಣಿ ಸಂಖ್ಯೆ ತೀರಾ ಕಡಿಮೆಯಿದೆ. ಮಂಗಳೂರು ಶಿಕ್ಷಣ ಕೇಂದ್ರವಾಗಿ ಬೆಳೆದಿದ್ದರೂ ಅಂಗಾಂಗ ದಾನದ ಬಗ್ಗೆ ಹೆಚ್ಚಿನ ಅರಿವು ಮೂಡಬೇಕಿದ್ದು, ಜನರಲ್ಲಿರುವ ತಪ್ಪು ತಿಳುವಳಿಕೆಗಳನ್ನು ನಿವಾರಿಸಿ ಅಂಗಾಂಗ ದಾನಕ್ಕೆ ಪ್ರೇರಣೆ ನೀಡುವ ಕೆಲಸವಾಗಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಾರತೀಯ ವೈದ್ಯಕೀಯ ಸಂಘದ (IMA) ಮಂಗಳೂರು ಘಟಕದ ಅಧ್ಯಕ್ಷ ಡಾ. ಸದಾನಂದ ಪೂಜಾರಿ ಮತ್ತು ಎಎಂಸಿ ಮಂಗಳೂರು ಘಟಕದ ಅಧ್ಯಕ್ಷ ಡಾ. ಪ್ರಶಾಂತ್ ಬಿ. ಅವರು ವಿದ್ಯಾರ್ಥಿಗಳಿಗೆ ಅಂಗಾಂಗ ದಾನದ ಮಹತ್ವದ ಕುರಿತು ಮಾಹಿತಿ ನೀಡಿದರು. ಅಂಗಾಂಗ ದಾನ ಪಡೆದಿದ್ದ ಡಾ. ಸುಭಾಶ್ಚಂದ್ರ ರೈ ಮಾತನಾಡಿ, "ಸಕಾಲದಲ್ಲಿ ಅಂಗಾಂಗ ದಾನ ಮಾಡಿದವರು ನನಗೆ ಮರುಜನ್ಮ ನೀಡಿದ್ದಾರೆ" ಎಂದು ತಮ್ಮ ಅನುಭವ ಹಂಚಿಕೊಂಡರು.

ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೂತ್ ರೆಡ್‌ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ. ಸುಮನಾ ಬಿ. ಮುಖ್ಯ ಅತಿಥಿಯನ್ನು ಪರಿಚಯಿಸಿದರು.

ಕಾರ್ಯಕ್ರಮದಲ್ಲಿ ರೆಡ್‌ಕ್ರಾಸ್ ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಪಿ.ಬಿ. ಹರೀಶ್ ರೈ, ರಾಘವೇಂದ್ರ ರಾವ್, ಯೇನೆಪೋಯ ವಿ.ವಿ.ಯ ಯೂತ್ ರೆಡ್‌ಕ್ರಾಸ್ ನೋಡಲ್ ಅಧಿಕಾರಿ ಡಾ. ನಿತ್ಯಶ್ರೀ ಬಿ.ವಿ., ಬೆಸೆಂಟ್ ಕಾಲೇಜಿನ ಯೂತ್ ರೆಡ್‌ಕ್ರಾಸ್ ಯೋಜನಾಧಿಕಾರಿ ದೀಕ್ಷಿತಾ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಉಪಾಧ್ಯಕ್ಷ ಡಾ. ಬಿ. ಸಚ್ಚಿದಾನಂದ ರೈ ಸ್ವಾಗತಿಸಿದರು, ಕಾರ್ಯದರ್ಶಿ ಡಾ. ಸತೀಶ್‌ಕುಮಾರ್ ಶೆಟ್ಟಿ ವಂದಿಸಿದರು ಹಾಗೂ ವಿದ್ಯಾರ್ಥಿನಿ ಖೈರುನ್ನಿಸಾ ಕಾರ್ಯಕ್ರಮ ನಿರೂಪಿಸಿದರು.

Category
ಕರಾವಳಿ ತರಂಗಿಣಿ