ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಸಾಲೂರು ಗ್ರಾಮದ ಬಳಿ ಅಕ್ರಮವಾಗಿ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನವನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ ಸಾಗರ ಘಟಕದ ಗೋ ರಕ್ಷಾ ಕಾರ್ಯಕರ್ತರ ಮೇಲೆ ಗೋ ಕಳ್ಳರು ಪಿಕಪ್ ವಾಹನದಿಂದ ಡಿಕ್ಕಿ ಹೊಡೆಸಿ, ಲಾಂಗ್ ಹಾಗೂ ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆಯನ್ನು ವಿಶ್ವ ಹಿಂದೂ ಪರಿಷತ್ತು ತೀವ್ರವಾಗಿ ಖಂಡಿಸಿದೆ.
ಇಂದು ಈ ಅಕ್ರಮ ಗೋ ಸಾಗಾಟದ ಜಾಲವು ತಾಲ್ಲೂಕಿನ ಎಲ್ಲೆಯನ್ನೂ ಮೀರಿ ಬೃಹತ್ ಪ್ರಮಾಣದಲ್ಲಿ ಬೆಳೆದಿರುವುದು ಮಾತ್ರವಲ್ಲದೆ, ಸಾರ್ವಜನಿಕರ ಜೀವಕ್ಕೂ ಕಂಟಕವಾಗಿ ಪರಿಣಮಿಸಿದೆ ಎಂದು ಕಳವಳ ವ್ಯಕ್ತಪಡಿಸಲಾಗಿದೆ.
ಈ ಭೀಕರ ದಾಳಿ ನಡೆಸಿ ಗೂಂಡಾಗಿರಿ ಮೆರೆದಿರುವ ಅಪರಾಧಿಗಳ ಮೇಲೆ ತಕ್ಷಣವೇ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗಿದೆ. ಒಂದು ವೇಳೆ ತಪ್ಪಿತಸ್ಥರ ವಿರುದ್ಧ ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಎಚ್ಚರಿಕೆ ನೀಡಿದ್ದಾರೆ.