image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

ಪ್ರಿಯಾಂಕ್ ಖರ್ಗೆ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಪ್ರಿಯಾಂಕ್ ಖರ್ಗೆ ಅವರ ಕಾರ್ಯವೈಖರಿ ಹಾಗೂ ಆರ್‌ಎಸ್‌ಎಸ್ ಕುರಿತು ಅವರು ನೀಡುತ್ತಿರುವ ಹೇಳಿಕೆಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಛಲವಾದಿ ನಾರಾಯಣಸ್ವಾಮಿ, ಸಚಿವರನ್ನು 'ಮೋಸ್ಟ್ ಕರಪ್ಟ್ ಪರ್ಸನ್' (ಅತ್ಯಂತ ಭ್ರಷ್ಟ ವ್ಯಕ್ತಿ) ಎಂದು ಕಟುವಾಗಿ ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೂ ಅದರ ಬಗ್ಗೆ ಗಮನಹರಿಸದ ಸಚಿವರು, ಕೇವಲ ಆರ್‌ಎಸ್‌ಎಸ್ ಹಾಗೂ ಅವರ ಉಡುಪಿನ ಬಗ್ಗೆ ಮಾತನಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ದೇಶದ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯನ್ನು ಎತ್ತಿ ಹಿಡಿಯುವ ಆರ್‌ಎಸ್‌ಎಸ್ ಸಂಘಟನೆಯನ್ನು ಮುಗಿಸಲು ಕಾಂಗ್ರೆಸ್ ಹೈಕಮಾಂಡ್‌ಗೆ ಅಥವಾ ಸ್ವತಃ ಪ್ರಿಯಾಂಕ್ ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ಅವರಿಂದಲೂ ಸಾಧ್ಯವಾಗಿಲ್ಲ. ಆರ್‌‌ಎಸ್‌ಎಸ್ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ಸರ್ಕಾರವೇ ಒಪ್ಪಿಕೊಂಡಿರುವಾಗ, ಕೇವಲ ದ್ವೇಷದ ರಾಜಕಾರಣಕ್ಕಾಗಿ ಟೀಕಿಸುವುದು ಸರಿಯಲ್ಲ ಎಂದು ಸವಾಲು ಹಾಕಿದ್ದಾರೆ.

ಸಚಿವರು ದಲಿತರ ಉದ್ಧಾರಕ್ಕಿಂತ ಅವರ ಹೆಸರನ್ನು ಬಳಸಿಕೊಂಡು ಆಸ್ತಿ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಅವರು, ಸಚಿವರ ಸ್ವಕ್ಷೇತ್ರದಲ್ಲೇ 13 ಅಟ್ರಾಸಿಟಿ ಪ್ರಕರಣಗಳು ದಾಖಲಾಗಿವೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದರೂ ಸಚಿವರು ಮೌನ ವಹಿಸಿದ್ದಾರೆ ಹಾಗೂ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ, ಪ್ರಿಯಾಂಕ್ ಖರ್ಗೆ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕುರಿತು ಕಾಂಗ್ರೆಸ್ ಮಾಡುತ್ತಿರುವ ಗದ್ದಲವನ್ನು ಖಂಡಿಸಿದ ಅವರು, ಎಸ್‌ಐಆರ್ ಎಂಬುದು ಚುನಾವಣಾ ಆಯೋಗದ ಸ್ವತಂತ್ರ ಕೆಲಸವಾಗಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ಈ ಪ್ರಕ್ರಿಯೆ ನಡೆದಿತ್ತು, ಆದರೆ ಈಗ ಮುಂಬರುವ ಸೋಲಿನ ಭೀತಿಯಿಂದ ಕಾಂಗ್ರೆಸ್ 'ವೋಟ್ ಚೋರಿ' ಎಂಬ ಸುಳ್ಳು ಆರೋಪ ಮಾಡುತ್ತಿದೆ ಎಂದು ಲೇವಡಿ ಮಾಡಿದರು.

Category
ಕರಾವಳಿ ತರಂಗಿಣಿ