ಬೆಂಗಳೂರು: ರಾಜ್ಯದ 202 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ‘ಪ್ರಗತಿಪಥ’ ಯೋಜನೆ ಅಡಿಯಲ್ಲಿ 5,400 ಕಿಲೋಮೀಟರ್ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಮೊದಲ ಹಂತದಲ್ಲಿ 1,692 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ 2,248 ಕಿಲೋಮೀಟರ್ ಕಾಮಗಾರಿ ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಲಾಗಿರುವ 562 ರಸ್ತೆಗಳ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಏಷ್ಯಾ ಅಭಿವೃದ್ಧಿ ಬ್ಯಾಂಕ್ ನೆರವಿನ ಈ ಯೋಜನೆಯಲ್ಲಿ ಶೇ. 70ರಷ್ಟು ಆರ್ಥಿಕ ನೆರವನ್ನು ಬ್ಯಾಂಕ್ ಒದಗಿಸುತ್ತಿದ್ದರೆ, ಉಳಿದ ಶೇ. 30ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ಭರಿಸಲಿದೆ.
ಈ ಯೋಜನೆಯ ಮೊದಲ ಹಂತದ ಕಾಮಗಾರಿಗೆ ನವೆಂಬರ್ ಮೊದಲ ವಾರದಲ್ಲಿ ಅಧಿಕೃತವಾಗಿ ಚಾಲನೆ ನೀಡಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು. ಈ ಉನ್ನತ ಮಟ್ಟದ ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕ ದೇವರಾಜೇಗೌಡ ಹಾಗೂ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಮುಖ್ಯ ಎಂಜಿನಿಯರ್ ಮುರಳೀಧರ್ ಸೇರಿದಂತೆ ಮುಂತಾದ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.