image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬೈಂದೂರು ಪಟ್ಟಣ ಪಂಚಾಯಿತಿಯಿಂದ ಗ್ರಾಮೀಣ ಪ್ರದೇಶ ಕೈಬಿಡಲು ಸಚಿವರಿಂದ ಅಧಿಕೃತ ನಿರ್ದೇಶನ

ಬೈಂದೂರು ಪಟ್ಟಣ ಪಂಚಾಯಿತಿಯಿಂದ ಗ್ರಾಮೀಣ ಪ್ರದೇಶ ಕೈಬಿಡಲು ಸಚಿವರಿಂದ ಅಧಿಕೃತ ನಿರ್ದೇಶನ

ಉಡುಪಿ: ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಗ್ರಾಮೀಣ ಪ್ರದೇಶಗಳನ್ನು ಪ್ರತ್ಯೇಕ ಗ್ರಾಮ ಪಂಚಾಯಿತಿಗಳಾಗಿ ಮರುರಚಿಸುವಂತೆ ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ನಡೆಸಲಾಗುತ್ತಿದ್ದ 432 ದಿನಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಸರ್ಕಾರದಿಂದ ಸ್ಪಂದನೆ ದೊರೆತಿದೆ.

ರಾಜ್ಯ ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಮಂಗಳವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟಗಾರರೊಂದಿಗೆ ಚರ್ಚೆ ನಡೆಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆಯಂತೆ ಶಾಸಕ ಮಂಜುನಾಥ ಭಂಡಾರಿ ಸಲ್ಲಿಸಿದ ಮನವಿಯನ್ನು ಆಲಿಸಿದ ಸಚಿವರು, ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ತಗ್ಗರ್ಸೆ, ಆಲಂದೂರು, ವಸ್ರೆ, ಗಂಗನಾಡು ಹಾಗೂ ಮದ್ದೋಡಿ ಗ್ರಾಮಗಳನ್ನು ತಕ್ಷಣವೇ ಕೈಬಿಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಅಗತ್ಯ ನಿರ್ದೇಶನ ನೀಡಿದರು.

ಗ್ರಾಮೀಣ ಭಾಗದ ಜನರಿಗೆ ಪಟ್ಟಣ ಪಂಚಾಯಿತಿ ಸೇರ್ಪಡೆಯಿಂದ ಉಂಟಾಗಿದ್ದ ತೊಂದರೆಯನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಸಚಿವರು, ಈ ಕೂಡಲೇ ಪ್ರತಿಭಟನೆಯನ್ನು ಹಿಂಪಡೆಯುವಂತೆ ವಿನಂತಿಸಿದರು.

ಈ ವೇಳೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮುಖಂಡರಾದ ಅರುಣ್ ಕುಮಾರ್, ವೀರಭದ್ರ ಗಾಣಿಗ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಪೂಜಾರಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ರೈತ ಹೋರಾಟಗಾರರು ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ